Saturday, May 24, 2025
Homeಬೀದರ್ಸರ್ಕಾರಿ ಆಸ್ಪತ್ರೆಗಳಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ: ಶಾಸಕ ಪ್ರಭು ಚವ್ಹಾಣ ಆಗ್ರಹ

ಸರ್ಕಾರಿ ಆಸ್ಪತ್ರೆಗಳಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ: ಶಾಸಕ ಪ್ರಭು ಚವ್ಹಾಣ ಆಗ್ರಹ

ಬೀದರ್ : ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ವೈದ್ಯರು ಹಾಗೂ ಮತ್ತಿತರೆ ಸಿಬ್ಬಂದಿಗಳ ಕೊರತೆಯಿಂದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ ಗುಂಡುರಾವ ಅವರನ್ನು ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಲಿಖಿತವಾಗಿ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು ಮತ್ತು 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಕೆಲವೊಂದು ಷರತ್ತುಗಳಿಗೆ ಒಳಪಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮತಿ ನೀಡಲಾಗಿದೆ. ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕಾತಿ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದಿದ್ದಾರೆ.
ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ ಒಟ್ಟು 320 ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿಮಾಡಲು ವಿಶೇಷ ನೇಮಕಾತಿ ಸಮಿತಿಯ ಮುಖಾಂತರ ಕ್ರಮ ವಹಿಸಲಾಗುತ್ತಿದ್ದು, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸುವ ಹಂತದಲ್ಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದಲ್ಲಿನ ಸಹಾಯಕ ಕೀಟ ಶಾಸ್ತ್ರಜ್ಞರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಖಾಲಿಯಿರುವ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹಾಗೂ 300 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕೆಲವೊಂದು ಷರತ್ತಿಗೊಳಪಟ್ಟು ಅನುಮೋದನೆ ನೀಡಿದ್ದು, ಕರಡು ವಿಶೇಷ ನೇಮಕಾತಿ ನಿಯಮಗಳನ್ನು ರಚಿಸುವ ಹಂತದಲ್ಲಿರುತ್ತದೆ.
ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್ ಡಿ ಹುದ್ದೆಗಳನ್ನು ಶೇ.30 ರಷ್ಟು ನಾನ್ ಕ್ಲಿನಿಕಲ್ ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇಲಾಖೆಯಲ್ಲಿ ಕಾಲಕಾಲಕ್ಕೆ ಹುದ್ದೆಗಳನ್ನು ನಿಯಮಾನುಸಾರ ನೇರ ಖಾಲಿಯಾಗುವ ನೇಮಕಾತಿ, ಮುಂಬಡ್ತಿ, ಗುತ್ತಿಗೆ ಆಧಾರದಡಿ ಹಾಗೂ ವರ್ಗಾವಣೆ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.
ನಂತರ ಸಚಿವರನ್ನು ಭೇಟಿ ಮಾಡಿದ ಶಾಸಕರು,‌ ಔರಾದ(ಬಿ) ಕ್ಷೇತ್ರವು ರಾಜ್ಯದ ಗಡಿಯಲ್ಲಿದ್ದು, ಡಾ.ನಂಜುಂಡಪ್ಪ ವರದಿಯಂತೆ ತೀವ್ರ ಹಿಂದುಳಿದ ಪ್ರದೇಶವಾಗಿದೆ. ಇಲ್ಲಿನ ಜನತೆ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಮತ್ತಿತರೆ ಹುದ್ದೆಗಳು ಖಾಲಿ ಇರುವುದರಿಂದ ಜನತೆಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ‌. ಸಣ್ಣಪುಟ್ಟ ರೋಗಗಳಿಗೂ ಜಿಲ್ಲಾ ಕೇಂದ್ರದ ಆಸ್ಪತ್ರೆಗಳಿಗೆ ಹೋಗಬೇಕಾದ ಪರಿಸ್ಥಿತಿಯಿದೆ. ಗಂಭೀರ ಸ್ವರೂಪದ ಸಮಸ್ಯೆಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿಷಯದ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ವೈದ್ಯರು ಹಾಗೂ ಮತ್ತಿತರೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ  ಸರ್ಕಾರಕ್ಕೆ ಅನೇಕ ಸಲ ಪತ್ರ ಬರೆದಿದ್ದೇನೆ. ಯಾವುದೇ ಪ್ರಯೋಜನವಾಗಿಲ್ಲ‌. ಆರೋಗ್ಯ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬಡ ಜನತೆಯ ಹಿತದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಎಲ್ಲ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳಬೇಕೆಂದು ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.‌
————
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3