ಬೀದರ್ : ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳಿಗೆ ಹೋಗಬಯಸುವವರಿಗೆ ನೀಟ್ (ಯುಜಿ) ಪರೀಕ್ಷೆ ಮೇ.4 ರಂದು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುವ ನೀಟ್ (ಯುಜಿ) ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ (ಯುಜಿ) ಪರಿಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7653 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಆಯೋಜಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ನಿμÉೀಧಾಜ್ಞೆ ಜಾರಿಗೊಳಿಸಲಾಗುವುದು ಹಾಗೂ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಇಡುವುದು ಮತ್ತು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪತ್ರಿಕೆ ಮತ್ತು ಮಾಧ್ಯಮಗಳ ಪ್ರವೇಶ ನಿಬರ್ಂಧಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷಾ ಕೊಠಡಿ ಸ್ವಚ್ಛತೆಯಿಂದ ಇರಿಸುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಕೆಎಸ್‍ಆರ್‍ಟಿಸಿ ಕಡೆಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಡಿ.ವಾಯ್.ಎಸ್.ಪಿ. ಶಿವನಗೊಡ ಪಾಟೀಲ್, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ ಶಹಾಬಾದಕರ್, ನೀಟ್ ಸಿಟಿ ಸಂಯೋಜಕರಾದ ಮಂಜುನಾಥ ಮಠಪತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
*****