ಬೀದರ್: ಜಿಲ್ಲೆಯ ಖಾಸಗಿ ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳಿಂದ ದುಬಾರಿ ಶುಲ್ಕ ಪಡೆಯುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೇ 8 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದ್ದಾರೆ.
ಬೆಳಿಗ್ಗೆ 10 ರಿಂದ ಧರಣಿ ಆರಂಭಿಸಲಾಗುವುದು. ಬಳಿಕ ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ತೆಗೆದುಕೊಳ್ಳುತ್ತಿರುವು ದರಿಂದ ಮಕ್ಕಳ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಬಡ ಪಾಲಕರಿಗೆ ಹೊರೆಯಾಗಿದೆ ಎಂದು ಆರೋಪಿಸಿದ್ದಾರೆ.
ಬೇರೆಡೆಯ ಕೆಲ ಖಾಸಗಿ ಪದವಿಪೂರ್ವ ಕಾಲೇಜುಗಳು ತರಬೇತಿ ಹೆಸರಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಂದ ಸಾವಿರಾರು ರೂಪಾಯಿ ವಸೂಲಿಯಲ್ಲಿ ತೊಡಗಿವೆ. ಹೀಗಾಗಿ ಅಧಿಕೃತ ಕಾಲೇಜಗಳಲ್ಲೇ ವಿದ್ಯಾರ್ಥಿಗಳ ಪ್ರವೇಶಕ್ಕೆ ಕ್ರಮ ಕೈಗೊಳ್ಳಬೇಕು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಕೈಗೆಟಕುವಂತೆ ಶಾಲಾ, ಕಾಲೇಜು ಶುಲ್ಕ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.