ಬೀದರ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸ್ವಯಂ ಉದ್ಯೋಗ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮ ಶಕ್ತಿ ಸಾಲ ಯೋಜನೆ, ಶ್ರಮ ಶಕ್ತಿ ವಿಶೇಷ ಮಹಿಳೆಯರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಯೋಜನೆ, ನೇರ ಸಾಲ ಯೋಜನೆ, ವಿದೇಶ ವ್ಯಾಸಂಗಕ್ಕೆ ಶಿಷ್ಯವೇತನ, ಚರ್ಚ್‍ಗಳ ದುರಸ್ತಿ, ನವೀಕರಣ, ಸಮುದಾಯ ಭವನ, ಸ್ಮಶಾನ ಸುತ್ತಗೋಡೆ ನಿರ್ಮಾಣ ಮೊದಲಾದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಪಾಲಕರಿಗೆ ಶಿಕ್ಷಣದ ಮಹತ್ವ ಮನವರಿಕೆ ಮಾಡಿಕೊಡಬೇಕು. ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಚರ್ಚ್‍ಗಳ ಅಭಿವೃದ್ಧಿ ಯೋಜನೆ ಅನುದಾನ ಯಾವುದೇ ಕಾರಣಕ್ಕೂ ದುರುಪಯೋಗ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಟ್ಯಾಕ್ಸಿ ಕಾರು ಹಾಗೂ ಪ್ರಯಾಣಿಕ ಆಟೊ ವಿತರಿಸಲಾಯಿತು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಬಳಿರಾಮ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ಮಹಮ್ಮದ್ ಸಲಾವುದ್ದೀನ್, ಕ್ರಿಶ್ಚಿಯನ್ ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಇದ್ದರು.
——————–